ಹುಬ್ಬಳ್ಳಿ
ಜನರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಾರ್ಯ ಪ್ರವೃತ್ತವಾಗಬೇಕು. ಪೋಲಿಸ ಇಲಾಖೆಯು ಜನಸ್ನೇಹಿ ಪೊಲೀಸ್ ಇಲಾಖೆಯಾಗಿ ಕಾರ್ಯನಿರ್ವಹಿಸಬೇಕು ಎಂಬುದು ಸರಕಾರದ ಅಭಿಲಾಷೆಯಾಗಿದೆ ಎಂದು ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಹೇಳಿದರು.
ಗೋಕುಲ ರಸ್ತೆಯ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಹಾಗೂ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯದ ವತಿಯಿಂದ ಗೋಕುಲ ರಸ್ತೆ ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪೋಲಿಸ್ ಇಲಾಖೆಯು ಸ್ನೇಹಮಯಿಯಾಗಿ ಕೆಲಸ ನಿರ್ವಹಿಸಬೇಕಿದೆ. ಕಾನೂನು ಉಲ್ಲಂಘನೆ ಮಾಡುವವರಿಗೆ ಶಿಕ್ಷೆ ವಿಧಿಸುವ ಅಧಿಕಾರ ಪೊಲೀಸರಿಗೆ ಇದೆ ಎಂದರು.
ಜನರು ಪೊಲೀಸ್ ಠಾಣೆಗೆ ಬಂದಾಗ ಅವರನ್ನು ಕೆಟ್ಟ ಭಾವನೆಯಿಂದ ನೋಡಬಾರದು. ಜನರ ಕಷ್ಟಗಳನ್ನು ಪೊಲೀಸರು ಆಲಿಸಬೇಕು. ಪೊಲೀಸ್ ಠಾಣೆಗೆ ಬರುವವರನ್ನು ಅಪರಾಧ ಮಾಡಿದವರ ರೀತಿಯಲ್ಲಿ ಕಾಣಬಾರದು ಎಂದು ಗೃಹಸಚಿವರು ತಿಳಿಸಿದರು.
ಪೊಲೀಸ್ ಠಾಣೆಗಳನ್ನು ಕಾರ್ಪೊರೇಟ್ ಆಫೀಸ್ ರೀತಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಪೊಲೀಸ್ ಸಿಬ್ಬಂದಿಗಳಿಗೆ ಎಲ್ಲ ರೀತಿಯ ಸವಲತ್ತುಗಳನ್ನು ಒದಗಿಸಲಾಗುತ್ತಿದೆ. ಪೊಲೀಸರು ಪಕ್ಷಾತೀತವಾಗಿ ಕರ್ತವ್ಯ ನಿರ್ವಹಿಸಬೇಕು. ಹೊಸ ವರ್ಷ ಸಂಭ್ರಮಾಚರಣೆ ಸಂದರ್ಭದಲ್ಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.
ಡ್ರಗ್ಸ ಮುಕ್ತ ಅವಳಿ ನಗರ ವಿಚಾರವಾಗಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಹುಬ್ಬಳ್ಳಿ ಧಾರವಾಡ ನಗರಗಳನ್ನು ಡ್ರಗ್ಸ್ ಮುಕ್ತ ಮಾಡಲು ಪೊಲೀಸರು ಒತ್ತು ನೀಡಬೇಕಿದೆ ಎಂದು ಗೃಹ ಸಚಿವರು ಸೂಚನೆ ಕೊಟ್ಟರು.
2 ಸಾವಿರ ಜನರಲ್ಲಿ 800 ಜನರಿಗೆ ಪಾಸಿಟಿವ್ ಬಂದಿರುವುದು ಆತಂಕಕಾರಿ ವಿಷಯವಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಡ್ರಗ್ಸ್ ಬಳಸದಂತೆ ತಿಳುವಳಿಕೆ ನೀಡಬೇಕಾಗಿದೆ. ಆ ನಿಟ್ಟಿನಲ್ಲಿ ಸರ್ಕಾರ ಡ್ರಗ್ಸ್ ವಿರುದ್ಧ ಯುದ್ಧವನ್ನೆ ಸಾರಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಡ್ರಗ್ಸ್ ಸರಬರಾಜು ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅವರನ್ನು ಹತ್ತಿಕ್ಕುವ ಕೆಲಸಗಳು ಆಗಬೇಕಿದೆ. ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿವೆ. ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕಲಾಗುವುದು ಎಂದು ಡಾ.ಜಿ.ಪರಮೇಶ್ವರ ತಿಳಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ, ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಅಬ್ಬಯ್ಯ ಪ್ರಸಾದ, ಶಾಸಕರಾದ ಮಹೇಶ ಟೆಂಗಿನಕಾಯಿ, ಎನ್.ಎಚ್. ಕೋನರಡ್ಡಿ, ಪ್ರದೀಪ ಶೆಟ್ಟರ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಮಹಾಪೌರರಾದ ರಾಮಣ್ಣ ಬಡಿಗೇರ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಡಿಸಿಪಿಗಳಾದ ಮಹಾನಿಂಗ ನಂದಗಾವಿ, ರವೀಶ ಸಿ.ಆರ್., ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ ಸೇರಿದಂತೆ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು. ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ ಸ್ವಾಗತಿಸಿದರು.



