ಭುವನೇಶ್ವರ:
ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಹಾಸ್ಟೆಲ್‌ನಲ್ಲಿ ನೇಪಾಳಿ ವಿದ್ಯಾರ್ಥಿನಿ ಪ್ರಕೃತಿ ಲಾಮ್ಸಾಲ್ ಆತ್ಮಹತ್ಯೆಗೆ ಶರಣಾಗಿದ್ದು ಈ ಸಂಬಂಧ ನೇಪಾಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ವಿದ್ಯಾರ್ಥಿನಿ ಆತ್ಮಹತ್ಯೆ ನಂತರ ನ್ಯಾಯಕ್ಕಾಗಿ ಆಗ್ರಹಿಸಿ 500ಕ್ಕೂ ಹೆಚ್ಚು ನೇಪಾಳಿ ವಿದ್ಯಾರ್ಥಿಗಳು KIIT ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಇದರಿಂದ ಕುಪಿತಗೊಂಡ KIIT ಆಡಳಿತ ಮಂಡಳಿ, ಪ್ರತಿಭಟನೆ ನಡೆಸಲು ಮುಂದಾದ ನೇಪಾಳಿ ವಿದ್ಯಾರ್ಥಿಗಳನ್ನು ಕ್ಯಾಂಪಸ್ ಖಾಲಿ ಮಾಡಿಸಿ ಹೊರಹಾಕಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ. ನೇಪಾಳಿ ವಿದ್ಯಾರ್ಥಿಗಳ ಮೇಲೆ ಆಡಳಿತ ಮಂಡಳಿ ದೌರ್ಜನ್ಯ ಎಸಗುತ್ತಿದೆ ಎಂದು ಮೃತ ವಿದ್ಯಾರ್ಥಿನಿಯ ತಂದೆ ಗಂಭೀರ ಆರೋಪ ಮಾಡಿದ್ದಾರೆ. ಈ ಖಾಸಗಿ ಎಂಜಿನಿಯರಿಂಗ್ ಸಂಸ್ಥೆ ನೇಪಾಳದ ವಿದ್ಯಾರ್ಥಿಗಳೊಂದಿಗೆ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಅವರು ಹೇಳಿದರು.
ಮೃತರ ತಂದೆ ಸುನಿಲ್ ಲಾಮ್ಸಲ್ ಮಂಗಳವಾರ ಬೆಳಿಗ್ಗೆ ಭುವನೇಶ್ವರ ತಲುಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ನಾನು ನನ್ನ ಮಗಳನ್ನು ಕಳೆದುಕೊಂಡಿದ್ದೇನೆ.” ಇನ್ನೂ ಅನೇಕ ಮಕ್ಕಳು ಇಲ್ಲಿ ಓದುತ್ತಿದ್ದಾರೆ. ಕೆಲವು ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಹಾಕಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದು ಸರಿಯಲ್ಲ. ಇಂತಹ ಘಟನೆ ಮತ್ತೆ ಸಂಭವಿಸಬಾರದು. ಆಡಳಿತ ಮಂಡಳಿ ನೇಪಾಳಕ್ಕೆ ಬಂದು ವಿದ್ಯಾರ್ಥಿಗಳನ್ನು ಇಲ್ಲಿ ಅಧ್ಯಯನ ಮಾಡಲು ಕರೆಯುತ್ತಾರೆ. ಸಂಸ್ಥೆಯು ಅವರನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತದೆ. ಕೆಐಐಟಿ ಆಡಳಿತದಿಂದ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ ಎಂದು ಹೇಳಿದರು.
ಒಡಿಶಾ ಸರ್ಕಾರ ಮತ್ತು ಪೊಲೀಸ್ ಆಡಳಿತದ ಬಗ್ಗೆ ಸುನಿಲ್ ಲಾಮ್ಸಾಲ್ ವಿಶ್ವಾಸ ವ್ಯಕ್ತಪಡಿಸಿದ್ದು, ತಮ್ಮ ಮಗಳ ಸಾವಿನ ಪ್ರಕರಣದಲ್ಲಿ ನ್ಯಾಯ ಸಿಗುವ ಭರವಸೆ ಇದೆ ಎಂದು ಹೇಳಿದರು. ನಾನು ನನ್ನ ಮಗಳನ್ನು ಉನ್ನತ ಶಿಕ್ಷಣಕ್ಕಾಗಿ ಇಲ್ಲಿಗೆ ಕಳುಹಿಸಿದ್ದೆ. ಸರ್ಕಾರ ನ್ಯಾಯ ನೀಡಲಿದೆ ಎಂದು ನಾವು ಭಾವಿಸುತ್ತೇವೆ. ನಮಗೆ ಸರ್ಕಾರ ಮತ್ತು ಪೊಲೀಸ್ ಆಡಳಿತದ ಮೇಲೆ ನಂಬಿಕೆ ಇದೆ ಎಂದು ಹೇಳಿದರು.
ಮೃತನ ಸೋದರಸಂಬಂಧಿ ಭುವನೇಶ್ವರದ ಇನ್ಫೋಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಭಾನುವಾರ ತನ್ನ ಸಹೋದರಿ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದರು. ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯೊಬ್ಬ ತನ್ನ ಸಹೋದರಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ ಹೀಗಾಗಿ ತನ್ನ ಸಹೋದರಿ ದುಡುಕು ನಿರ್ಧಾರ ತೆಗೆದುಕೊಂಡಿದ್ದಾಳೆ ಎಂದು ದೂರಿದ್ದಾರೆ.
ನೇಪಾಳಿ ವಿದ್ಯಾರ್ಥಿಗಳನ್ನು ಹಾಸ್ಟೆಲ್ ನಿಂದ ಹೊರಹಾಕಿರುವುದಕ್ಕೆ ಭಾರತದಲ್ಲಿನ ನೇಪಾಳಿ ರಾಯಭಾರ ಕಚೇರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿರುವ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರು, KIITಯಲ್ಲಿ ನಡೆದ ದುರಾದೃಷ್ಟಕರ ಘಟನೆ ಮಾಧ್ಯಮಗಳ ಮೂಲಕ ಗಮನಕ್ಕೆ ಬಂದಿದ್ದು, ನಮ್ಮ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಭುವನೇಶ್ವರಕ್ಕೆ ಕಳುಹಿಸಿ ಕೊಡಲಾಗಿದೆ. ಈ ಸಮಸ್ಯೆಯನ್ನು ಪರಿಹರಿಸಲಾಗುತ್ತದೆ ಎಂದು ಹೇಳಿದ್ದಾರೆ.
ಇನ್ನು ಪ್ರತಿಭಟನೆ ನಿರತ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಸಿಬ್ಬಂದಿಗಳು ಸುಮ್ಮನಿರುವಂತೆ ಧಮ್ಕಿ ಹಾಕುತ್ತಿರುವ ವಿಡಿಯೋ ವೈರಲ್ ಆಗಿದೆ.